ಡೈಲಿ ವಾರ್ತೆ: ಮಾ./03/2026

ಕುಂದಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ:
ದಶಕದ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

​ಕುಂದಾಪುರ: ಕಳೆದ ಹತ್ತು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಪ್ರಕರಣವೊಂದರ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಶಶಿಕಾಂತ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಆರೋಪಿ ಶಶಿಕಾಂತ್ ಶೆಟ್ಟಿ ಮೇಲೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ LPC ನಂ-3/2024 (ಸಿ.ಸಿ. ನಂ-2688/2015) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು ಒಂದು ದಶಕದಿಂದ ಪೊಲೀಸರಿಗೆ ಸಿಗದೆ ವಿದೇಶ ಅಥವಾ ಹೊರರಾಜ್ಯಗಳಲ್ಲಿ ಅವಿತಿದ್ದ ಎನ್ನಲಾದ ಈತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು.
​ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸ್ ತಂಡವು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬನಿನಾಥಪುರಕ್ಕೆ ತೆರಳಿ ಆರೋಪಿಯನ್ನು ಸಿನಿಮೀಯ ಮಾದರಿಯಲ್ಲಿ ದಸ್ತಗಿರಿ ಮಾಡಿದೆ.

​ಬಂಧಿತ ಆರೋಪಿಯನ್ನು ಕುಂದಾಪುರದ ಎ.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿದ ಮಾನ್ಯ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಸದ್ಯ ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.