ಡೈಲಿವಾರ್ತೆ:13/ಮಾರ್ಚ್/2026

ಶಿರಾಡಿ ಘಾಟ್‌ನಲ್ಲಿ ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್ – ಕಾರು ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ಮೂವರ ಸಾವು

​ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಸಮೀಪದ ಗುಂಡ್ಯ ಎಂಬಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ ಸಾವು-ನೋವಿಗೆ ಕಾರಣವಾಗಿದೆ.

​ಬೆಳ್ತಂಗಡಿಯಿಂದ ಸಕಲೇಶಪುರಕ್ಕೆ ಮದುವೆ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಶ್ರೀಧರ್ ಅವರು ಚಲಾಯಿಸುತ್ತಿದ್ದ ಕಾರು ಗುಂಡ್ಯ ಸಮೀಪ ಬರುತ್ತಿದ್ದಂತೆ ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

​ಮೃತಪಟ್ಟವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನವರು ಎಂದು ಗುರುತಿಸಲಾಗಿದೆ.
ಕೊಕ್ಕಡ ನಿವಾಸಿ ​ಚಂದ್ರಶೇಖರ್ ಗೌಡ
​ಕಾರು ಚಾಲಕ ಉಜಿರೆ ನಿವಾಸಿ ಶ್ರೀಧರ್, ​ಜನಾರ್ದನ ಕೆರಿಮಾರ್ ಮೃತರು.
​ಈ ಅಪಘಾತದಲ್ಲಿ ಸುರೇಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಮೂವರು ಕೂಡ ಪರಸ್ಪರ ಸಂಬಂಧಿಕರು ಎಂಬುದು ತಿಳಿದುಬಂದಿದೆ.

​ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.