

ಡೈಲಿವಾರ್ತೆ:15/ಮಾರ್ಚ್/2026


ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ: ಮೂವರು ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ಚಿತ್ರದುರ್ಗ, ಮಾರ್ಚ್ 15: ಜಿಲ್ಲೆಯ ಹೆಗ್ಗರೆ ಸಮೀಪ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ಸುಮಾರು 7 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಐದು ಮಂದಿ ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳು ಪ್ರಯಾಣಿಸುತ್ತಿದ್ದ ಕಾರು, ಮುಂದೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸುಮಾರು 300 ಮೀಟರ್ ದೂರವರೆಗೆ ಲಾರಿಯೊಂದಿಗೆ ಎಳೆಯಲ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ತಕ್ಷಣ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣೆಗೆರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಪೊಲೀಸರು ಮತ್ತು ಸ್ಥಳೀಯರ ಸಹಕಾರದಿಂದ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.