

ಡೈಲಿವಾರ್ತೆ:23/ಮಾರ್ಚ್/2026


ಮಂಗಳೂರು: ಆಟೋ ರಿಕ್ಷಾದಲ್ಲಿ ಡ್ರಗ್ಸ್ ಮಾರಾಟ; ಸಿಸಿಬಿ ಪೊಲೀಸರ ಮಿಂಚಿನ ದಾಳಿ, ಮೂವರ ಬಂಧನ

ಮಂಗಳೂರು, ಮಾ. 23: ನಗರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಆಟೋ ರಿಕ್ಷಾದಲ್ಲಿ ಸಂಚರಿಸುತ್ತಾ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿಗಳಾದ ಹೈದರ್ ಅಲಿಯಾಸ್ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29) ಮತ್ತು ಮಂಗಳೂರಿನ ಉಜ್ಜೋಡಿ ನಿವಾಸಿ (ಮೂಲತಃ ಕಾಪು) ಜೈಸನ್ ಮೆನೆಜಸ್ (26) ಬಂಧಿತ ಆರೋಪಿಗಳು.
ನಗರದ ಪಂಪವೆಲ್ ಹಾಗೂ ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾವೊಂದರಲ್ಲಿ ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯನ್ನಾಧರಿಸಿ ಮಾರ್ಚ್ 22ರಂದು ದಾಳಿ ನಡೆಸಿದ ಪೊಲೀಸರು, ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಿಂದ ಒಟ್ಟು 4,37,500/- ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
2,50,000/- ರೂ. ಮೌಲ್ಯದ 26 ಗ್ರಾಂ ಎಂಡಿಎಂಎ ಮಾದಕ ವಸ್ತು.
37,000/- ರೂ. ನಗದು ಹಣ ಹಾಗೂ 5 ಮೊಬೈಲ್ ಫೋನ್‌ಗಳು.
ಕೃತ್ಯಕ್ಕೆ ಬಳಸಿದ್ದ ಡಿಜಿಟಲ್ ತೂಕ ಮಾಪನ ಮತ್ತು ಕೆ.ಎ-19-ಎಸಿ-2245 ಸಂಖ್ಯೆಯ ಆಟೋ ರಿಕ್ಷಾ ಸೇರಿವೆ.
ಬಂಧಿತರ ಪೈಕಿ ಹೈದರ್ ಆಲಿ ಹಳೆಯ ಅಪರಾಧ ಹಿನ್ನೆಲೆಯುಳ್ಳವನಾಗಿದ್ದಾನೆ. ಈತನ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಹಾಗೂ 2024ರಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಉಳ್ಳಾಲ ಠಾಣೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ಮಾಡಿದ ಪ್ರಕರಣವೂ ಈತನ ಮೇಲಿದೆ.
ಈ ಕಾರ್ಯಾಚರಣೆಯ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡ್ರಗ್ಸ್ ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಪತ್ತೆಗಾಗಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತನಿಖೆ ಮುಂದುವರಿಸಿದ್ದಾರೆ.