

ಡೈಲಿವಾರ್ತೆ:27/ಮಾರ್ಚ್/2026


ಉಳ್ಳಾಲ| ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ಮಾರಕಾಸ್ತ್ರ ದಾಳಿ: ‘ಟ್ಯಾಬ್ಲೆಟ್’ ಆರೀಫ್ ಹತ್ಯೆ, ಆರೋಪಿಗಳು ಪರಾರಿ

ಮಂಗಳೂರು, ಮಾ.27: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ನಸುಕಿನ ವೇಳೆ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ.

ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42), ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ಆರೀಫ್ ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಆತ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು, ಶುಕ್ರವಾರ ಬೆಳಗಿನ ಜಾವ 3:30 ರ ಸುಮಾರಿಗೆ ಬುಲೆಟ್ ಬೈಕ್‌ನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ತೊಕ್ಕೊಟ್ಟು ಓವರ್‌ಬ್ರಿಡ್ಜ್ ಮೇಲ್ಸೇತುವೆಯಲ್ಲಿ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ಗುಂಪೊಂದು ಆತನ ಮೇಲೆ ಏಕಾಏಕಿ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕ್ರೂರವಾಗಿ ಕೊಚ್ಚಿ ಕೊಲೆಗೈದು ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

2022ರ ಮೇ ತಿಂಗಳಲ್ಲಿ ಕೂಡ ಇದೇ ರೀತಿಯಲ್ಲಿ ಆರೀಫ್ ಮೇಲೆ ಕೊಲೆ ಯತ್ನ ನಡೆದಿತ್ತು. ಆಗ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ಚೂರಿಯಿಂದ ಇರಿದು ದಾಳಿ ನಡೆಸಿದ್ದರೂ, ಆತ ಪ್ರಾಣಾಪಾಯದಿಂದ ಪಾರಾಗಿದ್ದನು.
ಮೂಲತಃ ಕುದ್ರೋಳಿ ನಿವಾಸಿಯಾಗಿದ್ದ ಆರೀಫ್ ಕಳೆದ ಆರು, ಏಳು ವರ್ಷಗಳಿಂದ ಕುಟುಂಬ ಸಮೇತ ಅಜ್ಜಿನಡ್ಕ ಸಮೀಪದ ಮುಳ್ಳುಗುಡ್ಡೆಯಲ್ಲಿ ವಾಸವಿದ್ದನು.
ಮೃತರು ಪತ್ನಿ, ಮೂವರು ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳನ್ನು ಅಗಲಿದ್ದು, ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಡಿಸಿಪಿ ಮಿಥುನ್ ಹಾಗೂ ಸೋಕೋ (SOCO) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.