

ಡೈಲಿವಾರ್ತೆ:27/ಮಾರ್ಚ್/2026


ಉದ್ಯಾವರ: ಕ್ರೇನ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ದುರ್ಮರಣ

ಉದ್ಯಾವರ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಕಾರವಾರ ಮೂಲದ ದಿವ್ಯಾ (45) ಎಂದು ಗುರುತಿಸಲಾಗಿದೆ. ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ ತಮ್ಮ ಪುತ್ರಿಯನ್ನು ಕಾರಿನಲ್ಲಿ ಕಾರವಾರಕ್ಕೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಉದ್ಯಾವರ ಬಲಾಯಿಪಾಡೆ ಬಳಿ ಯು-ಟರ್ನ್ ಪಡೆದ ದಿವ್ಯಾ ಅವರು, ಮಗಳಿಗೆ ಉಪಾಹಾರಕ್ಕಾಗಿ ಗುಡ್ಡೆಯಂಗಡಿ ಬಳಿಯ ಹೋಟೆಲ್‌ಗೆ ತೆರಳಿದ್ದರು.
ಈ ಸಂದರ್ಭದಲ್ಲಿ ಪುತ್ರಿ ಕ್ರಿಕೆಟ್ ಬ್ಯಾಟ್ ಬೇಕೆಂದು ಕೇಳಿದ ಕಾರಣ, ರಸ್ತೆಯ ಮತ್ತೊಂದು ಬದಿಗೆ ಹೋಗಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ವೇಗವಾಗಿ ಬಂದ ಕ್ರೇನ್ ದಿವ್ಯಾ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರ ನೆರವಿನೊಂದಿಗೆ ತಕ್ಷಣವೇ ಖಾಸಗಿ ವಾಹನದಲ್ಲಿ ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಸಾರ್ವಜನಿಕರ ಆಕ್ರೋಶ:
ರಾಷ್ಟ್ರೀಯ ಹೆದ್ದಾರಿ 66ರ ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿ ನಡೆಯುತ್ತಿರುವ ಸರ್ವಿಸ್ ರಸ್ತೆ ಕಾಮಗಾರಿಯು ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
”ಅರೆಬರೆ ಕಾಮಗಾರಿ ಹಾಗೂ ಅವೈಜ್ಞಾನಿಕ ತಿರುವುಗಳಿಂದಾಗಿ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಬಾಕಿ ಇರುವ ಸರ್ವಿಸ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು,” ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.