

ಡೈಲಿವಾರ್ತೆ:29/ಮಾರ್ಚ್/2026


ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು!

ಯಾದಗಿರಿ, ಮಾ.29: ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಕಿರಣ್ (6), ಬಸಮ್ಮ (11), ಶರತ್ (6) ಹಾಗೂ ಹನುಮೇಶ್ (7) ಎಂದು ಗುರುತಿಸಲಾಗಿದೆ.
ಶಾಲೆಗೆ ರಜೆ ಇದ್ದ ಹಿನ್ನೆಲೆ ಮಕ್ಕಳು ಆಟವಾಡುತ್ತಾ ಹತ್ತಿರದ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಪೋಷಕರು ಸ್ಥಳಕ್ಕೆ ಧಾವಿಸಿದ್ದು, ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕಸಮುದ್ರ ನಿರ್ಮಾಣವಾಗಿದೆ.
ಘಟನೆ ಸಂಬಂಧ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.