

ಡೈಲಿವಾರ್ತೆ:03/ಏಪ್ರಿಲ್ /2026


ಉಡುಪಿ: ಶಾಂತಿ ಭಂಗ ತಡೆಗೆ ಕ್ರಮ – ಇಬ್ಬರು ಕುಖ್ಯಾತ ರೌಡಿಗಳು ಜಿಲ್ಲೆಯಿಂದ ಗಡಿಪಾರು

ಉಡುಪಿ: ಜಿಲ್ಲೆಯ ಕಾಪು ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ರೌಡಿ ಶೀಟರ್‌ಗಳ ವಿರುದ್ಧ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ಆದೇಶದಂತೆ ಇವರಿಗೆ ಗಡಿಪಾರು ಶಿಕ್ಷೆ ವಿಧಿಸಲಾಗಿದೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ವಿರುದ್ಧ ನಾಲ್ಕು ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಹಲ್ಲೆ ಪ್ರಕರಣಗಳು ದಾಖಲಾಗಿದ್ದವು. ಇದೇ ವೇಳೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ವಿರುದ್ಧ ಐದು ಕೊಲೆ ಪ್ರಯತ್ನ ಪ್ರಕರಣಗಳು, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಸಂಬಂಧಿತ ಪ್ರಕರಣಗಳು ದಾಖಲಾಗಿದ್ದು, ಅವರ ವಿರುದ್ಧ ರೌಡಿ ಶೀಟರ್ ಕೂಡ ತೆರೆಯಲಾಗಿತ್ತು.
ಈ ಹಿನ್ನೆಲೆ, ಸಾರ್ವಜನಿಕ ಶಾಂತಿ ಮತ್ತು ಭದ್ರತೆ ದೃಷ್ಟಿಯಿಂದ ವಿಜೇತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಅದೇ ರೀತಿ ಆರೀಫ್ ಸಾಹೇಬ್ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಮುಂದುವರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.