



ಡೈಲಿವಾರ್ತೆ:15/ಏಪ್ರಿಲ್ /2026

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಘೋರ ದುರಂತ; ಮದ್ಯ ವ್ಯಸನಿಯ ಕಾರು ಹರಿದು 7 ವರ್ಷದ ಬಾಲಕಿ ಸಾವು

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆಯೇ ಭೀಕರ ಅಚಾತುರ್ಯವೊಂದು ಸಂಭವಿಸಿದೆ. ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಮೆರವಣಿಗೆಯ ಮೇಲೆ ಕಾರು ಚಲಾಯಿಸಿದ ಪರಿಣಾಮ, 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಮದ್ಯವ್ಯಸನಿ ಸುಧಾಕರ್ ಎಂಬಾತನ ಕಾರು ಮೆರವಣಿಗೆಯಲ್ಲಿದ್ದವರ ಮೇಲೆ ನುಗ್ಗಿದೆ. ಈ ಭೀಕರ ಅಪಘಾತದಲ್ಲಿ 7 ವರ್ಷದ ಬಾಲಕಿ ಸಾನ್ವಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ.
ಘಟನೆಯಲ್ಲಿ 11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಆಕ್ರೋಶಗೊಂಡ ಸ್ಥಳೀಯರು ಚಾಲಕ ಸುಧಾಕರ್‌ನನ್ನು ಹಿಡಿದು ತೀವ್ರವಾಗಿ ಥಳಿಸಿದ್ದಾರೆ. ಇದೇ ವೇಳೆ ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.
ಗಾಯಾಳುಗಳನ್ನು ಹಾಗೂ ಚಾಲಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆತಂದಾಗ ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಬದಲು, ಆರೋಪಿ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಪೊಲೀಸರು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. “ಚಾಲಕ ಚೆನ್ನಾಗಿದ್ದಾನೆ, ಮೊದಲು ಗಾಯಗೊಂಡ ಮಕ್ಕಳು ಮತ್ತು ಇತರರ ಪ್ರಾಣ ಉಳಿಸಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಇಲಾಖೆ, 50ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಎಎಸ್ಪಿ ಜಯಕುಮಾರ್ ಅವರ ಮುಂದೆ ಮೃತ ಮಗು ಹಾಗೂ ಗಾಯಾಳುಗಳ ಪೋಷಕರು ಕಣ್ಣೀರಿಡುತ್ತಾ ತಮ್ಮ ಅಳಲು ತೋಡಿಕೊಂಡರು. ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಎಎಸ್ಪಿ, ಕಾನೂನು ಕ್ರಮದ ಭರವಸೆ ನೀಡಿದರು.
ಸದ್ಯ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.