ಡೈಲಿವಾರ್ತೆ:15/ಏಪ್ರಿಲ್ /2026

ಕಾರು ಮರಕ್ಕೆ ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮುಸ್ಟೂರು–ಕಡಬನಕಟ್ಟೆ ಗ್ರಾಮದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇಲಾಖೆಯ ಸರ್ಕಲ್ ಇನ್ಸ್‌ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮೃತರನ್ನು ರಘುನಾಥ್ (45) ಎಂದು ಗುರುತಿಸಲಾಗಿದೆ. ಅವರು ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದಿಂದ ಜಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಚಾಲನೆಯಲ್ಲಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ರಘುನಾಥ್ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಘುನಾಥ್ ಅವರು ದಾವಣಗೆರೆ, ಚಿತ್ರದುರ್ಗ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸೇವೆ ಸಲ್ಲಿಸಿ ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕ ಹಾಗೂ ಸಮರ್ಪಿತ ಅಧಿಕಾರಿಯಾಗಿ ಹೆಸರು ಮಾಡಿದ್ದರು.

ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಜಗಳೂರು ಸಿಪಿಐ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.