



ಡೈಲಿವಾರ್ತೆ:16/ಏಪ್ರಿಲ್ /2026

SSLC ತೃತೀಯ ಭಾಷೆ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪ್ರಸಕ್ತ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಐತಿಹಾಸಿಕ ನಿರ್ದೇಶನ ನೀಡಿದೆ. ಈ ಮೂಲಕ ಕೊನೆಯ ಕ್ಷಣದಲ್ಲಿ ಜಾರಿಗೆ ತರಲು ಉದ್ದೇಶಿಸಲಾಗಿದ್ದ ಗ್ರೇಡಿಂಗ್ ಪದ್ಧತಿಗೆ ನ್ಯಾಯಾಲಯ ಬ್ರೇಕ್ ಹಾಕಿದ್ದು, ವಿದ್ಯಾರ್ಥಿಗಳ ಹಿತರಕ್ಷಣೆ ಮಾಡಿದೆ.
ಪ್ರಕರಣದ ಹಿನ್ನೆಲೆ
ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿದಂತೆ ಮೂವರು ವಿದ್ಯಾರ್ಥಿಗಳು ಸರ್ಕಾರದ ಗ್ರೇಡಿಂಗ್ ನೀತಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠವು, ಪ್ರಸಕ್ತ ಸಾಲಿನಿಂದಲೇ (2025-26) ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ (KSEAB) ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.
ಅರ್ಜಿದಾರರ ಪರ ವಾದದ ಪ್ರಮುಖಾಂಶಗಳು:
2024ರ ಅಕ್ಟೋಬರ್ ಮತ್ತು 2025ರ ಅಕ್ಟೋಬರ್‌ನಲ್ಲಿ ಮಂಡಳಿ ಹೊರಡಿಸಿದ್ದ ಸುತ್ತೋಲೆಯಂತೆ, ತೃತೀಯ ಭಾಷೆಗೆ 100 ಅಂಕಗಳನ್ನು (80 ಲಿಖಿತ + 20 ಆಂತರಿಕ) ನಿಗದಿಪಡಿಸಲಾಗಿತ್ತು. ಆದರೆ, ಪರೀಕ್ಷೆಯ ಹೊತ್ತಿನಲ್ಲಿ ಸರ್ಕಾರ ದಿಢೀರನೆ ಗ್ರೇಡ್ ನೀಡುವ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ.
ಯುಪಿಎಸ್‌ಸಿ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇವಲ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಗ್ರೇಡಿಂಗ್ ಪದ್ಧತಿಯಿಂದ ರಾಜ್ಯದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಹಿನ್ನಡೆ ಅನುಭವಿಸುವ ಭೀತಿ ಇದೆ. ಉದ್ಯೋಗ ಆಕಾಂಕ್ಷಿಗಳಿಗೆ ಅಂಕಗಳು ಮಾನದಂಡವಾಗಿರುವುದರಿಂದ, ಗ್ರೇಡಿಂಗ್ ಪದ್ಧತಿಯು ಅವರ ವೃತ್ತಿಜೀವನದ ಮೇಲೆ ದುಷ್ಪರಿಣಾಮ ಬೀರಲಿದೆ.
ನ್ಯಾಯಾಲಯದ ನಿಲುವು
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಗ್ರೇಡಿಂಗ್ ಕುರಿತು ಸದ್ಯ ಕರಡು ಅಧಿಸೂಚನೆ ಮಾತ್ರ ಹೊರಡಿಸಲಾಗಿದೆ ಎಂದು ತಿಳಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಚಾಲ್ತಿಯಲ್ಲಿರುವ ನಿಯಮಗಳು ಮತ್ತು ಮಾರ್ಗಸೂಚಿಗಳ ಅನ್ವಯವೇ ಪರೀಕ್ಷಾ ಪ್ರಕ್ರಿಯೆ ನಡೆಯಬೇಕು ಎಂದು ಸ್ಪಷ್ಟಪಡಿಸಿತು.
ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಮೌಲ್ಯಮಾಪನದಲ್ಲಿ ಅಂಕಗಳನ್ನೇ ನಮೂದಿಸಬೇಕು ಎಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದೆ.