ಡೈಲಿವಾರ್ತೆ:17/ಏಪ್ರಿಲ್ /2026

ದೈವದರ್ಶನ ಮುಗಿಸಿ ಬರುತ್ತಿದ್ದವರ ಬಾಳಲ್ಲಿ ವಿಧಿಯಟ್ಟಹಾಸ: ಕಾರು-ಬಸ್ ಮುಖಾಮುಖಿ ಡಿಕ್ಕಿ – ಮಗು ಸೇರಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಯಾದಗಿರಿ, ಏಪ್ರಿಲ್ 17: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ನಡೆದಿದೆ.

ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿದ್ದ VRL ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಎಲ್ಲ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ನಂತರ ಕಾರು ಹಾಗೂ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ನಿವಾಸಿಗಳೆಂದು ಗುರುತಿಸಲಾಗಿದ್ದು, ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರಲ್ಲಿ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಹಾಗೂ 12 ವರ್ಷದ ಮಗು ಸೇರಿದ್ದಾರೆ.
ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದರಿಂದ ಒಳಗಿದ್ದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ ನಂತರ ಸುಟ್ಟುಕರಕಲಾದ ಮೃತದೇಹಗಳನ್ನು ಹೊರತೆಗೆದು ಗುರುತು ಪತ್ತೆ ಮಾಡುವ ಕಾರ್ಯ ಕೈಗೊಂಡಿದ್ದಾರೆ.
ಇನ್ನೊಂದೆಡೆ, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ದುರಂತದಿಂದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.