



ಡೈಲಿವಾರ್ತೆ:21ಏಪ್ರಿಲ್ /2026

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ದಾಂಡೇಲಿ: ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.
ಧಾರವಾಡ ಮೂಲದ ಫಾರೂಖ್ ಸಾಬ್ ಹಾಗೂ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ದಾಂಡೇಲಿಯಿಂದ ಹಳಿಯಾಳದ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಜಗಾಂವ ಸಮೀಪದ ಕರ್ಕಾ ಕ್ರಾಸ್ ಬಳಿ ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಕಾರು ರಸ್ತೆ ಪಕ್ಕದ ಎರಡು ಬೃಹತ್ ಮರಗಳ ನಡುವೆ ಸಿಲುಕಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಬರಲಾರದಷ್ಟು ಸಿಲುಕಿಕೊಂಡಿದ್ದರು. ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ದಾಂಡೇಲಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.